CJPಯಿಂದ ಸಂಸತ್‌ ಚಲೋ ಪ್ರತಿಭಟನಾ ರ‍್ಯಾಲಿ; ಪೊಲೀಸರಿಂದ ಲಾಠಿ ಚಾರ್ಜ್; ಅಶ್ರುವಾಯು ಪ್ರಯೋಗ; ಅಭಿಜೀತ್ ದೀಪ್ಕೆ ಪೊಲೀಸರ ವಶಕ್ಕೆ

ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸುತ್ತಿರುವ ಸಂಸತ್‌ ಚಲೋ ಪ್ರತಿಭಟನಾ ರ‍್ಯಾಲಿ ವೇಳೆ ಭಾರೀ ಉದ್ವಿಗ್ನತೆ ಉಂಟಾಗಿದ್ದು, ಪಕ್ಷದ ಸಂಸ್ಥಾಪಕ ಅಭಿಜಿತ್‌ ದೀಪ್ಕೆಯವರನ್ನು (Abhijeet Dipke) ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಂಸತ್ ಮುತ್ತಿಗೆಗೆ ಯತ್ನಿಸಿದ ಕಾಕ್ರೋಚ್ ಜನತಾ ಪಾರ್ಟಿ (CJP) ಸದಸ್ಯರ ಮೇಲೆ ಪೊಲೀಸರು ಲಾಠಿಚಾರ್ಜ್‌(Lathi Charge) ಮಾಡಿದ್ದಾರೆ. ಅಲ್ಲದೇ ಪ್ರತಿಭಟನಾಕಾರರನ್ನು ಚದುರಿಸಲು ಅಶ್ರುವಾಯು ಸಿಡಿಸಿದ್ದಾರೆ. ಇದರಿಂದ ದೆಹಲಿಯಲ್ಲಿ ಭಾರೀ ಉದ್ವಿಗ್ನತೆ ಉಂಟಾಗಿದೆ. ಲಾಠಿಚಾರ್ಜ್‌ ಬೆನ್ನಲ್ಲೇ ದೆಹಲಿಯ ಕೆಲವು ಭಾಗಗಳಲ್ಲಿ ಮೊಬೈಲ್ ಇಂಟರ್ನೆಟ್ ಸ್ಥಗಿತಗೊಂಡಿದೆ. 

ಸಂಸತ್ತಿನ ಮಳೆಗಾಲದ ಅಧಿವೇಶನದ ಸಮಯದಲ್ಲಿ ಭಾರೀ ಭದ್ರತೆಯ ನಡುವೆಯೂ ಪ್ರತಿಭಟನಾಕಾರರು ʻಸಂಸತ್‌ ಚಲೋʼ ರ‍್ಯಾಲಿ ನಡೆಸಿದ್ದರು. ಬ್ಯಾರಿಕೇಡ್‌ಗಳನ್ನು ದಾಟಿ ಸಂಸತ್ತಿನ ಕಡೆಗೆ ನುಗ್ಗಲು ಪ್ರತಿಭಟನಾಕಾರರು ಯತ್ನಿಸಿದ್ದರು. ಈ ವೇಳೆ ಪೊಲೀಸರು ಹಲವಾರು ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ.

ಸಂಸತ್ತಿನ ಅಧಿವೇಶನ ಆರಂಭವಾಗುತ್ತಿರುವುದರಿಂದ ದೆಹಲಿ ನಗರದಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ’ಯ (BNSS) ಸೆಕ್ಷನ್ 163 (ಹಳೆಯ 144ನೇ ವಿಧಿ) ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಈ ಮೆರವಣಿಗೆಗೆ ಯಾವುದೇ ಅಧಿಕೃತ ಅನುಮತಿ ನೀಡಿರಲಿಲ್ಲ ಮತ್ತು ಕಾನೂನು ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಮುಂಚಿತವಾಗಿಯೇ ಎಚ್ಚರಿಸಿದ್ದರು.

NEET – 2026ರ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ವಿರೋಧಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಸಾವಿರಾರು ಪ್ರತಿಭಟನಾಕಾರರು, ವಿರೋಧ ಪಕ್ಷದ ನಾಯಕರು ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾಕಾರರು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅವರ ರಾಜೀನಾಮೆಗೆ ಆಗ್ರಹಿಸಿದ್ದಾರೆ.