ಕಲಬುರಗಿ; ಪೊಲೀಸ್‌ ವಾಹನದಲ್ಲೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಪೊಲೀಸ್ ಪೇದೆ

ಕಲಬುರಗಿ: ಇಲ್ಲಿನ ಜಗತ್ ವೃತ್ತದಲ್ಲಿ ಕರ್ತವ್ಯನಿರತ ನಗರ ಸಶಸ್ತ್ರ ಮೀಸಲು ಪೊಲೀಸ್‌ ಪಡೆಯ ಕಾನ್‌ಸ್ಟೆಬಲ್‌ವೊಬ್ಬರು ಸರ್ವೀಸ್‌ ರೈಫಲ್‌ನಿಂದ ಪೊಲೀಸ್‌ ವಾಹನದಲ್ಲೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯನ್ನು ಕಲಬುರಗಿ ನಗರ ಸಶಸ್ತ್ರ ಮೀಸಲು ಪಡೆಯ (CAR) ಪೇದೆ ಶಿವಕುಮಾರ್ ಮಾವನೂರ್ (32) ಎಂದು ಗುರುತಿಸಲಾಗಿದೆ. ಇವರು ಕಳೆದ ಮೂರು ತಿಂಗಳ ಹಿಂದೆಯಷ್ಟೇ ಬೆಂಗಳೂರಿನಿಂದ ಕಲಬುರಗಿ ನಗರಕ್ಕೆ ವರ್ಗಾವಣೆಯಾಗಿ ಬಂದು ಕರ್ತವ್ಯಕ್ಕೆ ಹಾಜರಾಗಿದ್ದರು.

ಶಿವಕುಮಾರ್ ಅವರು ಕರ್ತವ್ಯದ ಅವಧಿಯಲ್ಲಿ ಪೊಲೀಸ್ ವಾಹನದಲ್ಲಿ ಕುಳಿತಿದ್ದಾಗ ಈ ಘಟನೆ ನಡೆದಿದೆ. ವಾಹನದ ಒಳಗಡೆಯೇ ತಮ್ಮ ಬಳಿಯಿದ್ದ ಸರ್ಕಾರಿ ರೈಫಲ್ ತೆಗೆದುಕೊಂಡು ಶೂಟ್ ಮಾಡಿಕೊಂಡಿದ್ದಾರೆ. ಗುಂಡು ಹಾರಿದ ಶಬ್ದ ಕೇಳಿ ಸಹೋದ್ಯೋಗಿಗಳು ಓಡಿ ಬರುವಷ್ಟರಲ್ಲೇ ಅವರು ರಕ್ತದ ಮಡುವಿನಲ್ಲಿ ಬಿದ್ದು ಕೊನೆಯುಸಿರೆಳೆದಿದ್ದರು. ಆತ್ಮಹತ್ಯೆಗೆ ನಿಖರವಾದ ಕಾರಣವೇನೆಂಬುದು ಇನ್ನು ತಿಳಿದುಬಂದಿಲ್ಲ.

ಘಟನೆ ನಡೆದ ತಕ್ಷಣ ಜಗತ್ ವೃತ್ತದ ಬಳಿ ಸಾರ್ವಜನಿಕರು ದೊಡ್ಡ ಸಂಖ್ಯೆಯಲ್ಲಿ ಜಮಾಯಿಸಿದ್ದರು. ವಿಷಯ ತಿಳಿಯುತ್ತಿದ್ದಂತೆ ಕಲಬುರಗಿ ನಗರ ಪೊಲೀಸ್ ಆಯುಕ್ತರಾದ ಡಾ. ಶರಣಪ್ಪ ಎಸ್.ಡಿ., ಉಪ ಪೊಲೀಸ್ ಆಯುಕ್ತರಾದ (DCP) ಶಾಲೂ ಉದ್ಯೋಗ್ ಸೇರಿದಂತೆ ಹಲವು ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ವಿಧಿವಿಜ್ಞಾನ ಪ್ರಯೋಗಾಲಯದ (FSL) ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

ಮಾನಸಿಕ ಒತ್ತಡ ಅಥವಾ ಕೌಟುಂಬಿಕ ಕಲಹ ಇದರ ಹಿಂದಿದೆಯೇ ಎಂಬ ಕೋನದಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಜಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.