ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಹಿರಿಯ ಕಾಂಗ್ರೆಸ್ ನಾಯಕರಾಗಿರುವ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಹಾಗೂ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾದ ಈಶ್ವರ ಬಿ. ಖಂಡ್ರೆ ಅವರನ್ನು ಕರ್ನಾಟಕದ ಉಪಮುಖ್ಯಮಂತ್ರಿಯನ್ನಾಗಿ (ಡಿಸಿಎಂ) ನೇಮಿಸಬೇಕೆಂಬ ಒತ್ತಾಯ ಮತ್ತಷ್ಟು ಬಲಗೊಂಡಿದೆ.
ಈ ಹಿನ್ನೆಲೆಯಲ್ಲಿ ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಕೆಪಿಸಿಸಿ ಜಿಲ್ಲಾ ಉಪಾಧ್ಯಕ್ಷರು ಹಾಗೂ ಕಾಂಗ್ರೆಸ್ ಮುಖಂಡರು ಎಐಸಿಸಿ ರಾಷ್ಟ್ರೀಯ ಅಧ್ಯಕ್ಷರು ಮತ್ತು ಪಕ್ಷದ ಉನ್ನತ ನಾಯಕರಿಗೆ ಪತ್ರ ಬರೆದು, ರಾಜ್ಯದ ಹಿತದೃಷ್ಟಿಯಿಂದ ಹಾಗೂ ಪಕ್ಷ ಸಂಘಟನೆಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ಈಶ್ವರ ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಮನವಿ ಮಾಡಿದ್ದಾರೆ.
ಈ ಕುರಿತು ಹೆಡ್ ಲೈನ್ಸ್ ಕನ್ನಡದೊಂದಿಗೆ ಮಾತನಾಡಿದ ಖಂಡ್ರೆ ಅವರ ಮಂಗಳೂರು ಮೂಲದ ಆಪ್ತ ಕೆಪಿಸಿಸಿ ಯುವ ಸಂಘಟಕ ಎ ಕೆ ಅನ್ಸಾಫ್ ರವರು ಖಂಡಿತವಾಗಿಯೂ ಖಂಡ್ರೆ ಅವರು ಈಗಾಗಲೇ ತಮ್ಮ ನೇರ ನಡೆನುಡಿ ಹಾಗೂ ಜ್ಙಾನಭರಿತ ಆಡಳಿತದಿಂದ ತನಗೆ ವಹಿಸಿದ್ಧ ಇಲಾಖೆಗಳಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತಂದಿದ್ದಾರೆ. ದೇಶದ ಇತರ ರಾಜ್ಯಗಳೂ ಸಹ ನಮ್ಮ ರಾಜ್ಯದ ಅರಣ್ಯ ಇಲಾಖೆಯ ಕಾರ್ಯವೈಖರಿಯನ್ನು ಮೆಚ್ಚಿ ಅನುಕರಿಸಿದೆ. ಈಶ್ವರ್ ಖಂಡ್ರೆ ಅವರು ಉಪಮುಖ್ಯಮಂತ್ರಿ ಮಾತ್ರವಲ್ಲಾ ಮುಂದೊಮ್ಮೆ ಈ ರಾಜ್ಯದ ಮುಖ್ಯಮಂತ್ರಿ ಆಗಿಯೇ ಆಗುತ್ತಾರೆ ಎಂಬ ವಿಶ್ವಾಸ ಇದೆ ಎಂದಿದ್ದಾರೆ.
ಎಐಸಿಸಿ ರಾಷ್ಟ್ರೀಯ ಅಧ್ಯಕ್ಷರು ಮತ್ತು ಪಕ್ಷದ ಉನ್ನತ ನಾಯಕರಿಗೆ ಬರೆದ ಪತ್ರದಲ್ಲಿ, ಈಶ್ವರ ಖಂಡ್ರೆ ಅವರು ಹಲವು ದಶಕಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕರಾಗಿ ಸೇವೆ ಸಲ್ಲಿಸುತ್ತಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಜನಪರ ಹಾಗೂ ಅಭಿವೃದ್ಧಿ ಪರ ಆಡಳಿತ ನೀಡುತ್ತಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ರಾಜ್ಯದ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ, ಕುಡಿಯುವ ನೀರು, ಉದ್ಯೋಗ ಖಾತರಿ ಯೋಜನೆ, ಪಂಚಾಯತ್ ವ್ಯವಸ್ಥೆಯ ಬಲವರ್ಧನೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಅವರ ನಾಯಕತ್ವ ಗಮನಾರ್ಹವಾಗಿದೆ ಎಂದು ತಿಳಿಸಲಾಗಿದೆ.
ಅಲ್ಲದೆ, ಲಿಂಗಾಯತ ಸಮುದಾಯ ಸೇರಿದಂತೆ ಎಲ್ಲ ವರ್ಗಗಳ ಜನರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಈಶ್ವರ ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವುದರಿಂದ ಸಾಮಾಜಿಕ ಸಮತೋಲನದ ಜೊತೆಗೆ ಪಕ್ಷದ ಸಂಘಟನೆಗೂ ಹೆಚ್ಚಿನ ಬಲ ದೊರೆಯಲಿದೆ ಎಂದು ಪತ್ರದಲ್ಲಿ ಅಭಿಪ್ರಾಯ ವ್ಯಕ್ತಪಡಿಸಲಾಗಿದೆ.
ಈಶ್ವರ ಖಂಡ್ರೆ ಅವರ ದೀರ್ಘ ರಾಜಕೀಯ ಅನುಭವ, ಸರಳ ವ್ಯಕ್ತಿತ್ವ, ಆಡಳಿತಾತ್ಮಕ ದಕ್ಷತೆ ಹಾಗೂ ಜನಪರ ಕಾರ್ಯವೈಖರಿಯನ್ನು ಪರಿಗಣಿಸಿ ಪಕ್ಷದ ಹೈಕಮಾಂಡ್ ಸೂಕ್ತ ನಿರ್ಧಾರ ಕೈಗೊಳ್ಳಬೇಕೆಂದು ಪತ್ರದಲ್ಲಿ ಮನವಿ ಮಾಡಲಾಗಿದೆ.
ಈ ಬೆಳವಣಿಗೆಯಿಂದ ರಾಜ್ಯ ಕಾಂಗ್ರೆಸ್ ವಲಯದಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿದ್ದು, ಈಶ್ವರ ಖಂಡ್ರೆ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ನೇಮಿಸುವ ಕುರಿತು ಹೊಸ ಚರ್ಚೆಗೆ ವೇದಿಕೆ ಸೃಷ್ಟಿಯಾಗಿದೆ.
