ಮಳೆ ಕೊರತೆಯಿಂದ ಹಾನಿಗೊಳಗಾದ ಬೆಳೆಗಳ ಪರಿಶೀಲನೆ: ರೈತರಿಗೆ ಪರಿಹಾರ ಒದಗಿಸಲು ಕ್ರಮ: ಸಚಿವ ಈಶ್ವರ್ ಖಂಡ್ರೆ

ಬೀದರ್: ಬೀದರ್ ತಾಲೂಕಿನ ಚೋಂಡಿ ಹಾಗೂ ಚೋಳಿ ಗ್ರಾಮಗಳ ಹೊಲಗಳಿಗೆ ಇಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರು ಮತ್ತು ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಭೇಟಿ ನೀಡಿ, ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಬೀದರ ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಈ ವರ್ಷ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ರೈತರು ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಹೇಳಿದರು.



ಚೋಂಡಿ ಹಾಗೂ ಚೋಳಿ ಗ್ರಾಮಗಳ ವಿವಿಧ ಹೊಲಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಹೆಸರು, ಉದ್ದು, ಸೋಯಾಬೀನ್ ಹಾಗೂ ತೊಗರಿ ಬೆಳೆಗಳನ್ನು ಬಿತ್ತನೆ ಮಾಡಿದ್ದರೂ, ಮಳೆ ಕೈಕೊಟ್ಟ ಪರಿಣಾಮ ಹಲವು ಕಡೆ ಬೆಳೆಗಳು ಸಂಪೂರ್ಣವಾಗಿ ನಷ್ಟವಾಗಿರುವುದನ್ನು ಕಣ್ಣಾರೆ ಕಂಡಿರುವುದಾಗಿ ತಿಳಿಸಿದರು.

ರೈತರ ಬೆಳೆ ನಷ್ಟದ ಪ್ರಮಾಣ, ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಎದುರಾಗಿರುವ ಸಮಸ್ಯೆಗಳ ಕುರಿತು ಸ್ಥಳದಲ್ಲಿಯೇ ಅಧಿಕಾರಿಗಳು ಮತ್ತು ರೈತರಿಂದ ಸಚಿವರು ಮಾಹಿತಿ ಪಡೆದುಕೊಂಡರು.

ಬರ ಪರಿಸ್ಥಿತಿಯ ಕುರಿತು ಸಮಗ್ರ ವರದಿ ಪಡೆದು, ಅರ್ಹ ರೈತರಿಗೆ ಸರ್ಕಾರದಿಂದ ಅಗತ್ಯ ಪರಿಹಾರ ಹಾಗೂ ನೆರವು ದೊರಕಿಸಿಕೊಡಲು ಕ್ರಮ ಕೈಗೊಳ್ಳಲಾಗುವುದು.

ಸಂಕಷ್ಟದಲ್ಲಿರುವ ಅನ್ನದಾತನ ನೆರವಿಗೆ ಸರ್ಕಾರ ಸದಾ ನಿಲ್ಲಲಿದೆ ಎಂದು ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದರು.

ರೈತರ ಹಿತ ರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.