ಉಡುಪಿ: ಮಣ್ಣಿನಿಂದ ನಿರ್ಮಿತ ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಮೂಲಕ ಶ್ರದ್ಧಾಭಕ್ತಿಯಿಂದ ಪರಿಸರ ಸ್ನೇಹಿ ಗೌರಿ–ಗಣೇಶ ಹಬ್ಬ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಕರೆ ನೀಡಿದ್ದಾರೆ.
ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗಣೇಶೋತ್ಸವದ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸೆ.13 ಮತ್ತು 14ರಂದು ಗೌರಿ–ಗಣೇಶ ಹಬ್ಬ ಆಚರಿಸಲಾಗುತ್ತಿದ್ದು, ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಬೇಕು. ಪ್ಲಾಸ್ಟರ್ ಆಫ್ ಪ್ಯಾರಿಸ್ ಹಾಗೂ ರಾಸಾಯನಿಕ ಬಣ್ಣಗಳಿಂದ ತಯಾರಿಸಿದ ಮೂರ್ತಿಗಳು ನೀರಿನಲ್ಲಿ ಕರಗದೆ ಜಲಮಾಲಿನ್ಯ ಉಂಟುಮಾಡುವುದರ ಜತೆಗೆ ಜಲಚರಗಳಿಗೂ ಹಾನಿ ಉಂಟುಮಾಡುತ್ತವೆ. ಆದ್ದರಿಂದ ಇಂತಹ ಮೂರ್ತಿಗಳ ಬಳಕೆಗೆ ಅವಕಾಶ ನೀಡಬಾರದು ಎಂದರು.
ನೈಸರ್ಗಿಕ ಜಲಮೂಲಗಳ ಮೇಲಿನ ಒತ್ತಡ ಕಡಿಮೆ ಮಾಡಲು ಸ್ಥಳೀಯ ಸಂಸ್ಥೆಗಳು ನಿಗದಿಪಡಿಸಿರುವ ತಾತ್ಕಾಲಿಕ ಅಥವಾ ಕೃತಕ ವಿಸರ್ಜನಾ ತೊಟ್ಟಿಗಳಲ್ಲೇ ಗಣಪತಿ ಮೂರ್ತಿಗಳನ್ನು ವಿಸರ್ಜಿಸಬೇಕು. ವಿಸರ್ಜನೆ ಸಂದರ್ಭದಲ್ಲಿ ಹಸಿ ಹಾಗೂ ಒಣಕಸವನ್ನು ನೀರಿಗೆ ಎಸೆಯದೆ ಪ್ರತ್ಯೇಕವಾಗಿ ವಿಂಗಡಿಸಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು ಎಂದು ಸೂಚಿಸಿದರು.
ನದಿ, ಕೆರೆ, ಕೊಳ ಸೇರಿದಂತೆ ನೈಸರ್ಗಿಕ ಜಲಮೂಲಗಳಲ್ಲಿ ವಿಸರ್ಜನೆ ಅನಿವಾರ್ಯವಾಗಿರುವ ಕಡೆ ಸುರಕ್ಷತಾ ವ್ಯವಸ್ಥೆ ಹಾಗೂ ಮೂಲಸೌಕರ್ಯ ಕಲ್ಪಿಸಿ, ರಕ್ಷಣಾ ತಂಡ ಸೇರಿದಂತೆ ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದರು.
ಪಿಒಪಿ ಮೂರ್ತಿಗಳ ವಿರುದ್ಧ ನಿಗಾ
ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಮೂರ್ತಿಗಳ ತಯಾರಿಕೆ ಹಾಗೂ ಮಾರಾಟ ತಡೆಗಟ್ಟಲು ಹಬ್ಬಕ್ಕೂ ಮುನ್ನವೇ ಮೂರ್ತಿ ತಯಾರಿಕಾ ಘಟಕಗಳು, ಗೋದಾಮುಗಳು ಹಾಗೂ ಮಾರಾಟ ಕೇಂದ್ರಗಳ ಮೇಲೆ ನಿರಂತರ ತಪಾಸಣೆ ನಡೆಸಬೇಕು. ಪಿಒಪಿ ಮೂರ್ತಿಗಳ ಸಂಗ್ರಹಣೆ ಅಥವಾ ಮಾರಾಟ ಕಂಡುಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಾರ್ವಜನಿಕವಾಗಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಸಮಿತಿಗಳು ಸ್ಥಳೀಯ ಸಂಸ್ಥೆಗಳಿಂದ ಅಗತ್ಯ ಅನುಮತಿ ಪಡೆಯಬೇಕು. ಧ್ವನಿವರ್ಧಕ ಬಳಕೆಗೆ ಪೊಲೀಸ್ ಇಲಾಖೆಯಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಏಕಬಳಕೆ ಪ್ಲಾಸ್ಟಿಕ್ ಬಳಕೆ ಹಾಗೂ ರಾತ್ರಿ 10ರಿಂದ ಬೆಳಿಗ್ಗೆ 6ರವರೆಗೆ ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಲಾಗಿದ್ದು, ವಿಸರ್ಜನೆ ವೇಳೆ ಹಸಿರು ಪಟಾಕಿ ಹೊರತುಪಡಿಸಿ ಇತರ ಪಟಾಕಿಗಳ ಬಳಕೆಗೆ ಅವಕಾಶವಿಲ್ಲ ಎಂದು ತಿಳಿಸಿದರು.
ಶಾಲಾ–ಕಾಲೇಜುಗಳು, ಸಾಮಾಜಿಕ ಜಾಲತಾಣಗಳು ಹಾಗೂ ಸರ್ಕಾರೇತರ ಸಂಸ್ಥೆಗಳ ಮೂಲಕ ಪಿಒಪಿ ಮೂರ್ತಿಗಳಿಂದಾಗುವ ಅಪಾಯ ಮತ್ತು ಪರಿಸರ ಸ್ನೇಹಿ ಮೂರ್ತಿಗಳ ಬಳಕೆಯ ಕುರಿತು ನಿರಂತರ ಜಾಗೃತಿ ಮೂಡಿಸಬೇಕು. ಗಣೇಶ ವಿಸರ್ಜನಾ ಮೆರವಣಿಗೆ ಸಾಗುವ ಮಾರ್ಗಗಳಲ್ಲಿ ವಿದ್ಯುತ್ ತಂತಿಗಳಿಂದ ಯಾವುದೇ ಅವಘಡ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಎಎಸ್‌ಪಿ ಸುಧಾಕರ್ ನಾಯಕ್, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಡಾ. ಉದಯ್ ಶೆಟ್ಟಿ, ಜಿಲ್ಲಾ ಪರಿಸರ ಅಧಿಕಾರಿ ಡಾ. ಮಹೇಶ್ವರಿ ಸಿಂಗ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರ್‌ಗಳು, ಇಒಗಳು ಉಪಸ್ಥಿತರಿದ್ದರು.
