ಕೊಳತ್ತಮಜಲು ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಡೇಲು ಸೇರಿದಂತೆ 6 ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆ

ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕೊಳತ್ತಮಜಲು ಅಬ್ದುಲ್ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆರೋಪಿಗಳ ವಿರುದ್ಧ ಕೋಕಾ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ ಆರು ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗಿದೆ.

ಪ್ರಕರಣದ ಆರೋಪಿಗಳಾದ ಭರತ್ ಕುಮ್ಡೇಲು (38), ಶಿವಪ್ರಸಾದ್ (33), ಪ್ರದೀಪ್ (34), ಅಭಿನ್ ರೈ (32), ತೇಜಾಕ್ಷ (24) ಹಾಗೂ ರಂಜಿತ್ (35) ವಿರುದ್ಧ ಕಾನೂನುಬದ್ಧವಾಗಿ ಗೂಂಡಾ ಕಾಯ್ದೆ ಜಾರಿಗೊಳಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ತಿಳಿಸಿದ್ದಾರೆ.

ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಮುಂದುವರಿದ ಕ್ರಮಗಳನ್ನು ಕೈಗೊಂಡಿದೆ.