ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ವಿಡಿಯೋ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗವು (ಸಿಸಿಬಿ) ದೂರು ದಾಖಲಿಸಿಕೊಂಡು ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.
ಸ್ಟಿಂಗ್ ವಿಡಿಯೋ ವದಂತಿ ಬೆನ್ನಲ್ಲೇ ನ್ಯಾಯಾಲಯದ ಮೊರೆಹೋಗಿ ತಮ್ಮ ವಿರುದ್ಧ ಯಾವುದೇ ಆಕ್ಷೇಪಾರ್ಹ ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಪಡೆದಿದ್ದ ಸಿದ್ದರಾಮಯ್ಯ, ಕಿಡಿಗೇಡಿಗಳ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು. ಜತೆಗೆ ಸುಳ್ಳು ಮಾಹಿತಿ ಹರಡುತ್ತಿದ್ದ ನಿರ್ದಿಷ್ಟ ಸಾಮಾಜಿಕ ಜಾಲತಾಣ ಖಾತೆಗಳ ಐಪಿ ವಿವರಗಳನ್ನೂ ಒದಗಿಸಿದ್ದರು. ಈ ಬೆನ್ನಲ್ಲೆ ಸಿಸಿಬಿ ಸೈಬರ್ ಕ್ರೈಂ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಇಬ್ಬರು ಶಂಕಿತರನ್ನು ವಶಕ್ಕೆ ಪಡೆದು ಪ್ರತ್ಯೇಕ ಸ್ಥಳದಲ್ಲಿಟ್ಟು ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ನಡುವೆ, ಆಕ್ಷೇಪಾರ್ಹ ವಿಡಿಯೋ ಪ್ರಕಟಿಸದಂತೆ ನಿರ್ಬಂಧ ವಿಧಿಸಲು ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಮಂಗಳವಾರ ಸಂಜೆ ಪುರಸ್ಕರಿಸಿರುವ ಸೆಷನ್ಸ್ ನ್ಯಾಯಾಲಯ, 42 ಮಾಧ್ಯಮಗಳಿಗೆ ತಾತ್ಕಾಲಿಕ ಪ್ರತಿಬಂಧಕಾಜ್ಞೆ ವಿಧಿಸಿತ್ತು. ನ್ಯಾಯಾಲಯದ ಆದೇಶ ಹೊರ ಬಿದ್ದ ಬೆನ್ನಲ್ಲೆ ಹಲವು ಸಾಮಾಜಿಕ ಜಾಲತಾಣಗಳ ಖಾತೆಗಳಿಂದ ವಿಡಿಯೋ ಡಿಲೀಟ್ ಮಾಡಲಾಗಿದೆ.
ವಿಡಿಯೋ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ ''ನಾನು ಸಂಪೂರ್ಣವಾಗಿ ಅಭಿವ್ಯಕ್ತಿ ಸ್ವಾತಂತ್ರ್ಯ ಪರವಾಗಿ ಇರುವವನು. ಇಲ್ಲಿಯವರೆಗಿನ ನನ್ನ ರಾಜಕೀಯ ಜೀವನದಲ್ಲಿನಾನೆಂದೂ ಮಾಧ್ಯಮಗಳ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅಡ್ಡಿಪಡಿಸಿದವನಲ್ಲ. ಆದರೆ, ಕೆಲವು ಮಾಧ್ಯಮಗಳು ಅಭಿವ್ಯಕ್ತಿ ಸ್ವಾತಂತ್ರ್ಯದ ದುರುಪಯೋಗಪಡಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿಅನಿವಾರ್ಯವಾಗಿ ನ್ಯಾಯಾಲಯದ ಮೂಲಕ ಪ್ರಕಟಣೆ-ಪ್ರಸಾರಕ್ಕೆ ತಡೆಯಾಜ್ಞೆ ತರಬೇಕಾದ ಪ್ರಸಂಗ ಬಂದಿದೆ. ಈ ಬಗ್ಗೆ ನನಗೆ ವಿಷಾದವಿದೆ,'' ಎಂದಿದ್ದರು.
''ಸ್ಟಿಂಗ್ ಆಪರೇಷನ್ ವಿಡಿಯೋ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸುವಂತೆ ನಾನು ಈಗಾಗಲೇ ನಗರ ಪೊಲೀಸ್ ಆಯುಕ್ತರಿಗೂ ದೂರು ನೀಡಿದ್ದೇನೆ. ಆ ತನಿಖೆಯಿಂದ ಸತ್ಯ ಹೊರಬರಲಿದೆ ಎಂಬ ವಿಶ್ವಾಸವೂ ನನಗಿದೆ. ಅಲ್ಲಿಯವರೆಗೆ ಮಾಧ್ಯಮಗಳು ಮಾತ್ರವಲ್ಲ, ಸಾರ್ವಜನಿಕರು ಕೂಡ ಅನಗತ್ಯವಾಗಿ ಇಂತಹ ಸುಳ್ಳು ಸುದ್ದಿಯನ್ನು ಪ್ರಚಾರ ಮಾಡದೆ ಸತ್ಯದ ಪರವಾಗಿ ನಿಲ್ಲಬೇಕೆಂದು ಕೋರುತ್ತೇನೆ,'' ಎಂದಿದ್ದರು.
