ನವದೆಹಲಿ: ದೆಹಲಿಯ ಜಂತರ್ ಮಂತರ್ನಲ್ಲಿ ಅತಿಕ್ರಮಣ ಮಾಡಿದ ಆರೋಪದಡಿ ಮುನ್ನೆಚ್ಚರಿಕಾ ಕ್ರಮವಾಗಿ ಬಂಧಿಸಲ್ಪಟ್ಟಿದ್ದ ಕಾಕ್ರೋಚ್ ಜನತಾ ಪಾರ್ಟಿ (CJP) ನಾಯಕರಾದ ಸೌರವ್ ದಾಸ್ ಮತ್ತು ಆಶುತೋಷ್ ರಾಂಕಾ ಅವರನ್ನು ಐದು ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇವರೊಂದಿಗೆ ಅಜಿಂಕ್ಯ ಶಿಂಧೆ ಅವರ ಮೇಲೂ ಬಾಂಡ್ ಷರತ್ತು ಉಲ್ಲಂಘನೆ ಹಾಗೂ ಸಾರ್ವಜನಿಕ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಸೇರಿದಂತೆ ವಿವಿಧ ಪ್ರಕರಣಗಳನ್ನು ದಾಖಲಿಸಲಾಗಿದೆ.
ಬುಧವಾರ ಬೆಳಗ್ಗೆ ಸುಮಾರು 8 ಗಂಟೆಗೆ ಮೂವರನ್ನೂ ದೆಹಲಿಯ ಮಂದಿರ್ ಮಾರ್ಗ್ನಲ್ಲಿರುವ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು.
CJP ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿದ್ದು, ಸೌರವ್ ದಾಸ್ ಮತ್ತು ಆಶುತೋಷ್ ರಾಂಕಾ ಅವರಿಗೆ ಐದು ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ತಿಳಿಸಿದ್ದಾರೆ. ಸರ್ಕಾರದ ಕ್ರಮವನ್ನು ಟೀಕಿಸಿದ ಅವರು, ಭಿನ್ನಾಭಿಪ್ರಾಯದ ಧ್ವನಿಗಳನ್ನು ಹತ್ತಿಕ್ಕಲು ಪ್ರಯತ್ನಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ದೆಹಲಿ ಪೊಲೀಸ್ ಮೂಲಗಳ ಪ್ರಕಾರ, ಸೌರವ್ ದಾಸ್ ಮತ್ತು ಆಶುತೋಷ್ ರಾಂಕಾ ಅವರು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಸೆಕ್ಷನ್ 163ರ ಅಡಿಯಲ್ಲಿ ವಿಧಿಸಲಾಗಿದ್ದ ನಿರ್ಬಂಧಗಳನ್ನು ಮತ್ತೊಮ್ಮೆ ಉಲ್ಲಂಘಿಸಿದ್ದಾರೆ ಎನ್ನಲಾಗಿದೆ.
ಪುನರಾವರ್ತಿತ ಉಲ್ಲಂಘನೆ ಆರೋಪ ಎದುರಿಸುತ್ತಿರುವ ಇಬ್ಬರೂ, ಈ ಹಿಂದೆ ಮುಚ್ಚಳಿಕೆ ಬರೆದುಕೊಟ್ಟಿದ್ದ ಷರತ್ತುಗಳನ್ನು ಉಲ್ಲಂಘಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಉಲ್ಲಂಘನೆಗಳನ್ನು ಪರಿಗಣಿಸಿದ ನ್ಯಾಯಾಲಯವು ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.
ಮಂಗಳವಾರ ಬೆಳಗ್ಗೆ ಶಿಂಧೆ, ದಾಸ್ ಮತ್ತು ರಾಂಕಾ ಅವರು ಪೊಲೀಸರ ಬ್ಯಾರಿಕೇಡ್ಗಳನ್ನು ದಾಟಿ ಜಂತರ್ ಮಂತರ್ ಪ್ರವೇಶಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕೆಂದು ಘೋಷಣೆಗಳನ್ನು ಕೂಗಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿತ್ತು.
ಇದೇ ವೇಳೆ, ಅಜಿಂಕ್ಯ ಶಿಂಧೆ ಅವರನ್ನು ವೈಯಕ್ತಿಕ ಬಾಂಡ್ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು CJP ಕಾನೂನು ತಂಡದ ಮುಖ್ಯಸ್ಥೆ ರತ್ನಾ ಸಿಂಗ್ ಅವರು ಎಕ್ಸ್ನಲ್ಲಿ ತಿಳಿಸಿದ್ದಾರೆ.
ಈ ಹಿಂದೆ ಶಾಂತಿಭಂಗಕ್ಕೆ ಕಾರಣವಾಗುವ ಯಾವುದೇ ಚಟುವಟಿಕೆಯಲ್ಲಿ ಒಂದು ವರ್ಷದವರೆಗೆ ಭಾಗಿಯಾಗುವುದಿಲ್ಲ ಎಂಬ ಷರತ್ತಿನೊಂದಿಗೆ ತಲಾ 50,000 ರೂ.ಗಳ ಬಾಂಡ್ ಸಲ್ಲಿಸಿದ ಬಳಿಕ ಮೂವರನ್ನು ಬಿಡುಗಡೆ ಮಾಡಲಾಗಿತ್ತು. ಆದರೆ, ಈ ಬಾರಿ ಅತಿಕ್ರಮಣ ಮತ್ತು ಬಾಂಡ್ ಷರತ್ತು ಉಲ್ಲಂಘನೆ ಆರೋಪಗಳನ್ನು ಎದುರಿಸುತ್ತಿದ್ದು, ಅವರನ್ನು ಪುನರಾವರ್ತಿತ ಅಪರಾಧಿಗಳೆಂದು ಪರಿಗಣಿಸಲಾಗಿದೆ.
ಇದಕ್ಕೂ ಮೊದಲು, ಸಂಸತ್ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಇಂದಿನ ಜಂತರ್ ಮಂತರ್ ಪ್ರತಿಭಟನೆಗೆ ಸಂಬಂಧಿಸಿದಂತೆ ಸೌರವ್ ದಾಸ್, ಆಶುತೋಷ್ ರಾಂಕಾ ಮತ್ತು ಅಜಿಂಕ್ಯ ಶಿಂಧೆ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಅತಿಕ್ರಮಣ, ಬಾಂಡ್ ಷರತ್ತು ಉಲ್ಲಂಘನೆ ಹಾಗೂ ಸಾರ್ವಜನಿಕ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಗಳನ್ನು ದಾಖಲಿಸಲಾಗಿದೆ ಎಂದು CJP ಕಾನೂನು ತಂಡದ ಮುಖ್ಯಸ್ಥೆ ರತ್ನಾ ಸಿಂಗ್ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದರು.