ಉಚ್ಚಿಲ ದಸರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ; ಅ. 21ರವರೆಗೆ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳ ವೈಭವ

ಫೋಟೋ: ಸಚಿನ್ ಉಚ್ಚಿಲ 

ಉಚ್ಚಿಲ(ಉಡುಪಿ): ಕರಾವಳಿಯ ಧಾರ್ಮಿಕ ಹಾಗೂ ಸಾಂಸ್ಕೃತಿಕ ವೈಭವಕ್ಕೆ ಹೊಸ ಮೆರುಗು ನೀಡುತ್ತಿರುವ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಐದನೇ ವರ್ಷದ ದಸರಾ ಮಹೋತ್ಸವಕ್ಕೆ ರವಿವಾರ ವಿದ್ಯುಕ್ತ ಚಾಲನೆ ದೊರೆಯಿತು. ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಉತ್ಸವವನ್ನು ಉದ್ಘಾಟಿಸುವ ಮೂಲಕ 11 ದಿನಗಳ ದಸರಾ ಸಂಭ್ರಮಕ್ಕೆ ಚಾಲನೆ ನೀಡಿದರು.



ಅಕ್ಟೋಬರ್ 11ರಿಂದ 21ರವರೆಗೆ ನಡೆಯಲಿರುವ ಉಚ್ಚಿಲ ದಸರಾ ಮಹೋತ್ಸವವು ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರ ಹಾಗೂ ಭಕ್ತರ ನೆರವಿನೊಂದಿಗೆ ಆಯೋಜಿಸಲಾಗಿದೆ. ಶ್ರೀಮತಿ ಶಾಲಿನಿ ಡಾ. ಜಿ. ಶಂಕರ್ ಸಭಾಂಗಣದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳು ನಡೆಯಲಿವೆ.

ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ., ನವರಾತ್ರಿ ಆಚರಣೆಯು ವ್ಯಕ್ತಿಯೊಳಗಿನ ಧೈರ್ಯ, ಶಕ್ತಿ ಹಾಗೂ ಜ್ಞಾನವನ್ನು ಜಾಗೃತಗೊಳಿಸುವ ಪರ್ವವಾಗಿದೆ. ದೇವಿಯ ಆರಾಧನೆಯ ಮೂಲಕ ಆತ್ಮವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯನ್ನು ಬೆಳೆಸಿಕೊಂಡು ಜೀವನದಲ್ಲಿ ಮುನ್ನಡೆಯಬೇಕು ಎಂದರು.

ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮಾತನಾಡಿ, ಉಡುಪಿ ಜಿಲ್ಲೆಯಲ್ಲಿ ಅದ್ದೂರಿ ದಸರಾ ಆಚರಣೆಯ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಡಾ. ಜಿ. ಶಂಕರ್ ಅವರ ನೇತೃತ್ವದಲ್ಲಿ ಉಚ್ಚಿಲದಲ್ಲಿ ವೈಭವದ ಉತ್ಸವ ರೂಪುಗೊಂಡಿದೆ. ಪ್ರತಿವರ್ಷ ಉತ್ಸವದ ಜನಪ್ರಿಯತೆ ಹೆಚ್ಚುತ್ತಿದ್ದು, ಕರಾವಳಿಯ ಜನರನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸುತ್ತಿದೆ ಎಂದರು.

ಅಕ್ಟೋಬರ್ 12ರಂದು ನಡೆಯಲಿರುವ ಮಹಿಳಾ ದಸರಾವನ್ನು ಉದ್ಘಾಟಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸಬೇಕಿತ್ತು. ಆದರೆ, ತುರ್ತು ಕಾರ್ಯದ ನಿಮಿತ್ತ ದೆಹಲಿಗೆ ತೆರಳುತ್ತಿರುವುದರಿಂದ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಅಕ್ಟೋಬರ್ 21ರೊಳಗೆ ಉಚ್ಚಿಲಕ್ಕೆ ಭೇಟಿ ನೀಡುವುದಾಗಿ ಅವರು ತಿಳಿಸಿದ್ದಾರೆ ಎಂದು ಸೊರಕೆ ಈ ವೇಳೆ ಮಾಹಿತಿ ನೀಡಿದರು.

ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ, 2021ರಲ್ಲಿ ದೇವಸ್ಥಾನಕ್ಕೆ ಹೊಸ ರೂಪ ನೀಡಿದ ಬಳಿಕ ನಾಡೋಜ ಡಾ. ಜಿ. ಶಂಕರ್ ಅವರ ನೇತೃತ್ವದಲ್ಲಿ ಉಚ್ಚಿಲ ದಸರಾ ವಿಶೇಷ ಮನ್ನಣೆ ಗಳಿಸಿದೆ ಎಂದು ಹೇಳಿದರು. ಶ್ರೀ ಮಹಾಲಕ್ಷ್ಮೀ ದೇವಿಯು ನಾಡಿನ ಜನತೆಗೆ ಸುಖ, ಶಾಂತಿ, ಸಮೃದ್ಧಿ ಹಾಗೂ ಆಯುರಾರೋಗ್ಯ ಕರುಣಿಸಲಿ ಎಂದು ಹಾರೈಸಿದರು.




ಉತ್ಸವದ ರೂವಾರಿ ನಾಡೋಜ ಡಾ. ಜಿ. ಶಂಕರ್ ಪ್ರಾಸ್ತಾವಿಕವಾಗಿ ಮಾತನಾಡಿ, ದಸರಾ ಕಾರ್ಯಕ್ರಮಗಳ ವಿವರ ನೀಡಿದರು. ದಸರಾ ವಸ್ತುಪ್ರದರ್ಶನಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ದಸರಾ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಕರ್ಕೆರಾ, ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು, ಗಿರಿಧರ್ ಎಸ್. ಸುವರ್ಣ, ಸತೀಶ್ ಅಮೀನ್ ಪಡುಕೆರೆ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.