ಮಾತಿನಲ್ಲಿ ಮಾತ್ರ ವಿಕಾಸ, ಕಾರ್ಯರೂಪದಲ್ಲಿ ವಿನಾಶ; ಮೋದಿ ಸರಕಾರ ಸಂಪೂರ್ಣ ವಿಫಲ: ಎ.ಕೆ. ಅನ್ಸಾಫ್

ಮಂಗಳೂರು: ಕರ್ನಾಟಕ ಸರಕಾರದ ಖಜಾನೆಯಲ್ಲಿ ಹಣವಿಲ್ಲ ಎಂದು ಬಿಜೆಪಿ ನಾಯಕರು ಟೀಕಿಸುವ ಮೊದಲು, ಕೇಂದ್ರ ಸರಕಾರದಿಂದ ರಾಜ್ಯಕ್ಕೆ ಬರಬೇಕಾದ 5,000 ಕೋಟಿ ರೂ. ಪಾಲಿನ ಅನುದಾನಕ್ಕಾಗಿ ಪಕ್ಷಭೇದ ಮರೆತು ಧ್ವನಿ ಎತ್ತುವ ಪ್ರಬುದ್ಧತೆಯನ್ನು ತೋರಿಸಬೇಕು ಎಂದು ಕರಾವಳಿ ವಲಯ ನಿರ್ವಹಣಾ ಸಮಿತಿ ಸದಸ್ಯ ಹಾಗೂ ಕಾಂಗ್ರೆಸ್ ಸಂಘಟಕ ಎ.ಕೆ. ಅನ್ಸಾಫ್ ಹೇಳಿದ್ದಾರೆ.

ಕೇಂದ್ರ ಸರಕಾರ ಕನ್ನಡಿಗರೊಂದಿಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿದ ಅವರು, ಚುನಾವಣೆ ಸಂದರ್ಭದಲ್ಲಿ ರಾಜ್ಯಕ್ಕೆ ಆಗಮಿಸಿ ಅಭಿವೃದ್ಧಿಯ ಕುರಿತು ಭಾಷಣ ಮಾಡುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಕ್ಕೆ ನ್ಯಾಯಯುತವಾಗಿ ಸಿಗಬೇಕಾದ ಅನುದಾನದ ವಿಚಾರದಲ್ಲಿಯೂ ಗಮನಹರಿಸಬೇಕು ಎಂದು ಆಗ್ರಹಿಸಿದರು.

ಮೋದಿ ನೇತೃತ್ವದ ಕೇಂದ್ರ ಸರಕಾರ ಅಭಿವೃದ್ಧಿಯ ಹೆಸರಿನಲ್ಲಿ ಪ್ರಚಾರಕ್ಕೆ ಹೆಚ್ಚು ಒತ್ತು ನೀಡುತ್ತಿದ್ದು, ದೇಶದ ವಿವಿಧ ಕ್ಷೇತ್ರಗಳ ಪ್ರಗತಿಗೆ ಹಿನ್ನಡೆಯಾಗುತ್ತಿದೆ ಎಂದು ಅನ್ಸಾಫ್ ಟೀಕಿಸಿದರು. ತಮ್ಮ ಸರಕಾರದ ವಿರುದ್ಧದ ಭ್ರಷ್ಟಾಚಾರ ಆರೋಪಗಳನ್ನು ಮುಚ್ಚಿಹಾಕಲು ಆಡಳಿತಾರೂಢ ಬಿಜೆಪಿ ನಾಯಕರು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ ಅವರು, ರಾಹುಲ್ ಗಾಂಧಿ ನೇತೃತ್ವದಲ್ಲಿ ಯುವಜನರಲ್ಲಿ ವ್ಯಕ್ತವಾಗುತ್ತಿರುವ ರಾಜಕೀಯ ಜಾಗೃತಿಯ ಬಗ್ಗೆಯೂ ಪ್ರಸ್ತಾಪಿಸಿದರು.

ಕರ್ನಾಟಕ ಸರಕಾರ ಹಲವು ಜನಪರ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ದೇಶದ ಗಮನ ಸೆಳೆದಿದೆ. ರಾಜ್ಯ ಸರಕಾರದ ಸಾಧನೆ ಕನ್ನಡಿಗರಿಗೆ ಹೆಮ್ಮೆಯ ವಿಚಾರವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ನವೆಂಬರ್ 5ರಂದು ಬೆಂಗಳೂರಿನಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಇಂಡಿಯಾ ಒಕ್ಕೂಟ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ರಾಜ್ಯದ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಎ.ಕೆ. ಅನ್ಸಾಫ್ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.