ಕಾಂಗ್ರೆಸ್ನ ಪಂಚ ಗ್ಯಾರಂಟಿಗಳು ಕೇವಲ ಯೋಜನೆಗಳಲ್ಲ, ಸಮಾಜ ಪರಿವರ್ತನೆಯ ಶಕ್ತಿ
ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರು ಅಚ್ಚೇ ದಿನ್ ತರುವುದಾಗಿ ಭರವಸೆ ನೀಡಿ ಅಧಿಕಾರಕ್ಕೆ ಬಂದರು. ಆದರೆ ದೇಶದ ಜನರಿಗೆ ಬೆಲೆ ಏರಿಕೆ ಮತ್ತು ನಿರುದ್ಯೋಗದಂತಹ ಕೆಟ್ಟ ದಿನಗಳನ್ನು ನೀಡಿದ್ದಾರೆ. ವಿದ್ಯುತ್ ದರ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿದ್ದ ಜನರಿಗೆ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಆಸರೆಯಾಗಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಹೇಳಿದರು.
ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ನೇತೃತ್ವದಲ್ಲಿ ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಗ್ಯಾರಂಟಿ ಫಲಾನುಭವಿಗಳ ಬೃಹತ್ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಕೇವಲ ಸ್ಕೀಮ್ ಅಥವಾ ಸರಕಾರಿ ಕಾರ್ಯಕ್ರಮಗಳಲ್ಲ. ಅವು ಸಮಾಜವನ್ನು ಪರಿವರ್ತಿಸುವ ಶಕ್ತಿಯುತ ಯೋಜನೆಗಳಾಗಿವೆ. ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರಿಗೆ ಆರ್ಥಿಕ ಮತ್ತು ಸಾಮಾಜಿಕ ಶಕ್ತಿ ತುಂಬುವ ಉದ್ದೇಶದಿಂದ ಹಿರಿಯ ಕಾಂಗ್ರೆಸ್ ನಾಯಕರ ಆಶೀರ್ವಾದ ಪಡೆದು ಈ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದರು.
ರಾಜ್ಯದ ಜನರಿಗೆ ನೀಡಿದ್ದ ಭರವಸೆಯಂತೆ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಅಚ್ಚೇ ದಿನ್ ಭರವಸೆ ಇನ್ನೂ ಈಡೇರಿಲ್ಲ. ಆಹಾರ ಪದಾರ್ಥಗಳು, ಅಡುಗೆ ಅನಿಲ, ಇಂಧನ ಸೇರಿದಂತೆ ದಿನಬಳಕೆಯ ವಸ್ತುಗಳ ಬೆಲೆ ನಿರಂತರವಾಗಿ ಏರುತ್ತಿದೆ. ಮತ್ತೊಂದೆಡೆ ಪುರುಷರ ಆದಾಯ ಹೆಚ್ಚಾಗಿಲ್ಲ. ನಿರುದ್ಯೋಗಿ ಯುವಕರ ಸಂಖ್ಯೆ ಹೆಚ್ಚುತ್ತಿದ್ದು, ಕೋಟ್ಯಂತರ ಯುವಕರು ಉದ್ಯೋಗವಿಲ್ಲದೆ ಸಂಕಷ್ಟ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜನರಿಗೆ ಆರ್ಥಿಕ ನೆರವು ನೀಡಲು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದು ಹೇಳಿದರು.
ವಿದ್ಯುತ್ ದರ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನರಿಗೆ ಗೃಹಜ್ಯೋತಿ ಯೋಜನೆ ನೆರವಾಗಿದೆ. ಕಾಂಗ್ರೆಸ್ ಸರ್ಕಾರ ದಿವಾಳಿಯಾಗುತ್ತಿದೆ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಸರಕಾರ ದಿವಾಳಿಯಾಗಿದೆಯೇ ಎಂಬುದನ್ನು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳನ್ನೇ ಕೇಳಿ ತಿಳಿದುಕೊಳ್ಳಲಿ. ಜನರ ಕೈಗೆ ಹಣ ಸೇರುತ್ತಿರುವುದನ್ನು ಸಹಿಸಿಕೊಳ್ಳಲಾಗದೆ ಬಿಜೆಪಿಯವರಿಗೆ ಹೊಟ್ಟೆ ಉರಿ ಉಂಟಾಗಿದೆ ಎಂದು ಟೀಕಿಸಿದರು.
ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಸಮಾಜದಲ್ಲಿ ಕಂದಕ ಸೃಷ್ಟಿಸುವುದು ಬಿಜೆಪಿಯ ಕೆಲಸವಾದರೆ, ಸಮಾಜದಲ್ಲಿ ಸಾಮರಸ್ಯದ ಬದುಕು ನಿರ್ಮಿಸುವುದು ಕಾಂಗ್ರೆಸ್ನ ಆಶಯವಾಗಿದೆ. ಜನರಿಗೆ ಸಿಗುತ್ತಿರುವ ಸೌಲಭ್ಯಗಳನ್ನು ನೋಡುವುದಕ್ಕಾದರೂ ಜಿಲ್ಲೆಯ ಶಾಸಕರು ಸಮಾವೇಶದ ವೇದಿಕೆಗೆ ಆಗಮಿಸಬೇಕಿತ್ತು. ಆದರೆ ಅವರಿಂದ ಅದನ್ನೂ ನೋಡಲಾಗುತ್ತಿಲ್ಲ ಎಂಬುದು ವಿಷಾದನೀಯ ಎಂದು ಹೇಳಿದರು.
ವಿಧಾನ ಪರಿಷತ್ತಿನ ಉಪಸಭಾಪತಿ ಉಮಾಶ್ರೀ ಮಾತನಾಡಿದರು. ಮಾಜಿ ಸಚಿವರಾದ ಎಚ್.ಎಂ. ರೇವಣ್ಣ, ವಿನಯಕುಮಾರ್ ಸೊರಕೆ, ಜಯಪ್ರಕಾಶ್ ಹೆಗ್ಡೆ, ಡಾ. ಪುಷ್ಪಾ ಅಮರನಾಥ್, ಮಂಜುನಾಥ್ ಪೂಜಾರಿ, ಡಾ. ವಾಸು, ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ದೀಪಕ್ ತಿಮ್ಮಯ್ಯ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಕಾಂಗ್ರೆಸ್ ಮುಖಂಡರಾದ ಉದಯಕುಮಾರ್ ಶೆಟ್ಟಿ ಮುನಿಯಾಲು, ಪ್ರಸಾದ್ ರಾಜ್ ಕಾಂಚನ್, ಎಂ.ಎ. ಗಫೂರ್, ರಮೇಶ್ ಕಾಂಚನ್, ದಿನೇಶ್ ಹೆಗ್ಡೆ ಮೊಳಹಳ್ಳಿ, ಹರಿಪ್ರಸಾದ್ ರೈ, ದಿನಕರ್ ಹೇರೂರು ಮತ್ತಿತರರು ಉಪಸ್ಥಿತರಿದ್ದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಸ್ವಾಗತಿಸಿದರು.

